Heatwave Impact: ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗಗಳಲ್ಲಿ ಕಚೇರಿ ಸಮಯ ಬದಲಾವಣೆ ಆದೇಶ
Heatwave Impact: ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗದ ಜಿಲ್ಲೆಗಳಲ್ಲಿ 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿಸಿಲಿನ ಹಿನ್ನೆಲೆ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಸಮಯ, ಸರ್ಕಾರದ ಆದೇಶ ಮತ್ತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ.
ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಮನವಿಗಳಲ್ಲಿ ಕೋರಲಾಗಿದೆ. ಪ್ರಸ್ತಾಪಿಸಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದನ್ನು ಪರಿಗಣಿಸಿ, ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಗಿನಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ (ಆಸು) 71 ಮರ 2026, ಬೆಂಗಳೂರು, ದಿನಾಂಕ: 31.03.2026
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2026 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾವಣೆ ಮಾಡಿ ಆದೇಶಿಸಿದೆ.
2. ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು / ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

